ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಹಾಗೂ ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ 249 ಮಂದಿಯನ್ನು ಕಾಲೇಜು ಶಿಕ್ಷಣ ಇಲಾಖೆ ಸೇವೆಯಿಂದ ವಜಾಗೊಳಿಸಿದೆ. ವಿಶ್ವವಿದ್ಯಾಲಯಗಳ ದಾಖಲೆ ಪರಿಶೀಲನೆಯಲ್ಲಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. 2025–26ನೇ ಶೈಕ್ಷಣಿಕ ವರ್ಷದ ನೇಮಕಾತಿಯ ಬಳಿಕ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ವಿಶ್ವವಿದ್ಯಾಲಯಗಳಿಗೆ ಪರಿಶೀಲನೆಗಾಗಿ ಕಳುಹಿಸಲಾಗಿತ್ತು. ತನಿಖೆಯಲ್ಲಿ 249 ಪಿಎಚ್‌ಡಿ ಪ್ರಮಾಣಪತ್ರಗಳು ಅಮಾನ್ಯ ಎಂದು ವರದಿಯಾಗಿದ್ದು, ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಅವರನ್ನು ಭವಿಷ್ಯದ ಎಲ್ಲ ಅತಿಥಿ ಉಪನ್ಯಾಸಕರ ನೇಮಕಾತಿಯಿಂದ ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಲು ಇಲಾಖೆ ಸೂಚಿಸಿದೆ. ವಜಾಗೊಂಡವರಲ್ಲಿ 148 ಮಂದಿ ಕಲ್ಯಾಣ ಕರ್ನಾಟಕ ಭಾಗದ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬೀದರ್ ಜಿಲ್ಲೆಯ ಒಂದೇ ಸರ್ಕಾರಿ ಕಾಲೇಜಿನಲ್ಲಿ 19 ಮಂದಿ ನಕಲಿ ಪಿಎಚ್‌ಡಿ ಪ್ರಮಾಣಪತ್ರದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಪ್ರಕರಣವೂ ಬೆಳಕಿಗೆ ಬಂದಿದೆ. ಈ ಬೆಳವಣಿಗೆ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಸರ್ಕಾರ ಅಕ್ರಮಗಳ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

