ಬೆಂಗಳೂರು: ಮೇಲ್ಸೇತುವೆ ಮೇಲೆ ಕಾರು ನಿಲ್ಲಿಸಿಕೊಂಡು ಪಟಾಕಿ ಸಿಡಿಸಿ ಜನುಮ ದಿನ ಆಚರಿಸಿಕೊಂಡ ಗುತ್ತಿಗೆದಾರನ ವಿರುದ್ಧ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುತ್ತಿಗೆದಾರ ರಾಘವೇಂದ್ರ ಎಂಬುವರು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಹಳ್ಳಿ ಮೇಲ್ಸೇತುವೆ ಮೇಲೆ ಜುಲೈ 15ರಂದು ಕಾರು ನಿಲ್ಲಿಸಿಕೊಂಡು ಪಟಾಕಿ ಸಿಡಿಸಿ, ಜನುಮ ದಿನ ಆಚರಿಸಿಕೊಂಡ ವಿಡಿಯೊವನ್ನು ತಮ್ಮ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ವಿಡಿಯೊ ಸಮೇತ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ರಾಘವೇಂದ್ರ ಅವರನ್ನು ಪತ್ತೆಹಚ್ಚಿ ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟು ಮಾಡಿದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಸೆಕ್ಷನ್ 285ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಅವರ ಖಾತೆಯಲ್ಲಿದ್ದ ವಿಡಿಯೊವನ್ನು ತೆಗೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

