ಚಾಮರಾಜನಗರ (ಹನೂರು): ಕಾವೇರಿ ವನ್ಯಧಾಮದಲ್ಲಿ ಜಿಂಕೆ ಬೇಟೆಯಾಡಲು ಬಂದಿದ್ದ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತರನ್ನು ಅಂಥೋಣಿ ಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಓರ್ವ ಅರಣ್ಯ ಸಿಬ್ಬಂದಿ ಗಾಯಗೊಂಡಿದ್ದಾರೆ. ಹನೂರು ವನ್ಯಜೀವಿ ವಲಯದ ಶಾಗ್ಯ ವ್ಯಾಪ್ತಿಯ ಹೊಳೆಮುರದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಆರು ಮಂದಿ ಬೇಟೆಗಾರರ ತಂಡ ಜಿಂಕೆ ಬೇಟೆಯಾಡಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಅರಣ್ಯ ಸಿಬ್ಬಂದಿ ಮೇಲೆ ಬೇಟೆಗಾರರು ಗುಂಡು ಹಾರಿಸಿದ್ದು, ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬೇಟೆಗಾರ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಘಟನೆ ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

