ಹುಬ್ಬಳ್ಳಿ: ಹುಬ್ಬಳ್ಳಿಯ ಆಸರ ಓಣಿಯಲ್ಲಿ ಪುರಾತನ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಮೇಲೆ ರಸ್ತೆ ನಿರ್ಮಾಣ ಮಾಡುತ್ತಿರುವ ವಿಚಾರ ತೀವ್ರ ವಿವಾದಕ್ಕೆ ಕಾರಣವಾಗಿದೆ. ರಸ್ತೆ ನಿರ್ಮಾಣ ವಿರೋಧಿಸಿ ಹಿಂದೂಪರ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ರಸ್ತೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಪುರಾತನ ಪುಷ್ಕರಣಿ ಇದ್ದು, ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ನಿರ್ಮಿಸಿರುವ ರಸ್ತೆಯನ್ನು ಕಿತ್ತುಹಾಕುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮತ್ತೊಂದೆಡೆ, ರಸ್ತೆ ತೆರವುಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ದಲಿತ ಮತ್ತು ಮುಸ್ಲಿಂ ಸಂಘಟನೆಗಳು ಹೇಳಿವೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

