ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿದ್ದ ಸರಕು ವಾಹನಗಳ ಟ್ಯಾಂಕ್‌ನಿಂದ ಡೀಸೆಲ್ ಕದಿಯುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಜೈಮುತ್ತಾ (23) ಹಾಗೂ ಮುತ್ತು (28) ಬಂಧಿತ ಆರೋಪಿಗಳಾಗಿದ್ದಾರೆ. ಸೆ.3ರಂದು ರಾತ್ರಿ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಗಸ್ತಿನಲ್ಲಿದ್ದ ಪೊಲೀಸರಿಗೆ ಟ್ಯಾಂಕರ್ ಬಳಿ ಬೊಲೆರೋ ಪಿಕಪ್ ವಾಹನದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರು ಕಂಡುಬಂದಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಇಬ್ಬರನ್ನು ಬೆನ್ನಟ್ಟಿ ಬಂಧಿಸಿ ವಿಚಾರಣೆ ನಡೆಸಿದಾಗ ಡೀಸೆಲ್ ಕಳವು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಆರೋಪಿಗಳಿಂದ 20 ಲೀಟರ್ ಡೀಸೆಲ್ ಇದ್ದ ಕ್ಯಾನ್, ಖಾಲಿ ಕ್ಯಾನ್‌ಗಳು, ರಬ್ಬರ್ ಪೈಪ್ ಹಾಗೂ ಕೃತ್ಯಕ್ಕೆ ಬಳಸಿದ್ದ ಬೊಲೆರೋ ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

