ಧಾರವಾಡದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದ್ದು, ನ್ಯಾಯಾಲಯದ ವಿಚಾರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಪತಿಯ ಮೇಲೆ ಸುಮಾರು 6 ಮಂದಿಯ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಎಸ್‌ಬಿಐ ಮುಖ್ಯ ಶಾಖೆ ಸಮೀಪ ಘಟನೆ ನಡೆದಿದ್ದು, ಶಶಿಧರ್ ಶಿರಾಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಯಲ್ಲಿ ಶಶಿಧರ್ ಅವರ ತಲೆ, ಕೈ ಹಾಗೂ ಖಾಸಗಿ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮೊದಲು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಶಶಿಧರ್ ಡಿವೋರ್ಸ್ ನೀಡಲು ನಿರಾಕರಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ನಿಯ ಕಡೆಯವರೇ ಹಲ್ಲೆ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

