ಮೈಸೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು, ಬಳಿಕ ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ ಘಟನೆ ವಿಜಯನಗರದ ಡಿಪ್ಲೊಮಾ ಕಾಲೇಜಿನ ಹಾಸ್ಟೆಲ್ ಬಳಿ ಮಂಗಳವಾರ ನಡೆದಿದೆ. ಚಂದನ್ (27) ಎಂಬಾತ ಕೃತ್ಯ ಎಸಗಿದ್ದಾನೆ. ಮಂಡ್ಯದ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್, ಅದೇ ಗ್ರಾಮದ ಯುವತಿಯನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಯುವತಿ ಪ್ರೀತಿಯನ್ನು ನಿರಾಕರಿಸಿದ್ದರೂ ಪದೇಪದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಪ್ರೀತಿ ಮಾಡುವಂತೆ ಒತ್ತಾಯಿಸಿದ್ದಾನೆ. ಆಕೆ ನಿರಾಕರಿಸಿದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆಕೆಯನ್ನು ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಯುವತಿ ತಪ್ಪಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ದಾರಿಹೋಕರು ಆಕೆಯನ್ನು ರಕ್ಷಿಸಿ, ಚಂದನ್‌ನ ದೇಹಕ್ಕೆ ಹೊತ್ತಿದ್ದ ಬೆಂಕಿಯನ್ನೂ ನಂದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

