ಮಂಗಳೂರು: ಸುರತ್ಕಲ್ ಬಳಿಯ ಎಂಆರ್‌ಪಿಎಲ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತನನ್ನು ಮೂಲ್ಕಿಯ ಮನೀಶ್ ಕರ್ಕೇರಾ (30) ಎಂದು ಗುರುತಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ರಾಜೇಶ್ ಬ್ಯಾಪ್ಟಿಸ್ಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಪಕ್ಕದ ಕಚೇರಿಯಲ್ಲಿದ್ದ ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಎಂಆರ್‌ಪಿಎಲ್‌ನ ಕಳವಾರು ಪ್ರದೇಶದಲ್ಲಿರುವ ಹೈಡ್ರೊ ಸಲ್ಫರ್ ಸಂಸ್ಕರಣಾ (ಸಿಎಚ್‌ಟಿ) ಘಟಕದಲ್ಲಿ ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
