ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿಯೊಂದಿಗೆ ನಿರಂತರ ಸಂಪರ್ಕ ಹೊಂದಿ, ಪೊಲೀಸ್ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದ ಆರೋಪದ ಮೇಲೆ ಎನ್.ಆರ್.ಪುರ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಆದೇಶ ಹೊರಡಿಸಿದ್ದಾರೆ. ಅತ್ಯಾಚಾರ ಪ್ರಕರಣದ ಆರೋಪಿ ಸತೀಶ್ ಪಾತ್ರಿ ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಕಾಂತೇಶ್ ಆರೋಪಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಠಾಣೆಯ ಮಾಹಿತಿಯನ್ನು ಆತನಿಗೆ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕೋಳಿ ರಕ್ತ ಕುಡಿಯುವಂತೆ ಸತೀಶ್ ಹಿಂಸೆ ನೀಡಿದ್ದ ವಿಡಿಯೋ ವೈರಲ್ ಆಗಿದ್ದ ಬಳಿಕ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ನಂತರ ಆರೋಪಿ ತಲೆಮರೆಸಿಕೊಂಡಿದ್ದು, ಇದೀಗ ಆತನಿಗೆ ಮಾಹಿತಿ ನೀಡಿದ ಆರೋಪದಲ್ಲಿ ಕಾನ್ಸ್‌ಟೇಬಲ್ ಅಮಾನತುಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
