ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಮುಖ ಆರೋಪಿ ಲೋಕೇಶ್‌ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ, ಮತ್ತೊಬ್ಬ ಆರೋಪಿ ಗುರುಪ್ರಸಾದ್‌ಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಲಾಗಿದೆ. 2020ರ ಅಕ್ಟೋಬರ್‌ನಲ್ಲಿ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಪಂಚಾಕ್ಷರಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
