ಹಾಸನ: ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಹಿಮಾ ಮಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 3ನೇ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದಳು. ನೌಶಾದ್ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದ ಆಕೆ, ಕುಟುಂಬದವರ ಸಲಹೆಯಂತೆ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ್ದಳು. ಇದರಿಂದ ಇಬ್ಬರ ನಡುವೆ ಜಗಳವಾಗಿದ್ದು, ಆತ ಇಬ್ಬರೂ ಜೊತೆಯಾಗಿ ತೆಗೆಸಿಕೊಂಡಿದ್ದ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಎನ್ನಲಾಗಿದೆ. ಫೋಟೋಗಳನ್ನು ಅಳಿಸುವಂತೆ ಕೇಳಿದರೂ ನಿರಾಕರಿಸಿದ್ದರಿಂದ ಮನನೊಂದ ಹಿಮಾ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಳು. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾಳೆ. ತಾಯಿ ಭವಿತಾ ನೀಡಿದ ದೂರಿನ ಮೇರೆಗೆ ಸಕಲೇಶಪುರ ಗ್ರಾಮಾಂತರ ಪೊಲೀಸರು ನೌಶಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
