ನಾಯಕನಹಟ್ಟಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ತೆಲಂಗಾಣದ ಬೋಡಿಗ ಶ್ರೀನಿವಾಸ್ ಎಂಬುವವರಿಗೆ ₹10 ಲಕ್ಷ ವಂಚಿಸಿದ ಆರೋಪದ ಮೇಲೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಡಿ. ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ. 26ರಂದು ಚಿನ್ನಹಗರಿ ಹಳ್ಳದ ಬಳಿ ಶ್ರೀನಿವಾಸ್ ಅವರಿಗೆ ಪರಿಚಯವಾಗಿದ್ದ ಆರೋಪಿ, ತನ್ನ ಹೆಸರು ತಿಪ್ಪೇಸ್ವಾಮಿ ಎಂದು ಸುಳ್ಳು ಹೇಳಿ 250 ಗ್ರಾಂ ಚಿನ್ನ ನೀಡಿ ₹10 ಲಕ್ಷ ಪಡೆದು ಪರಾರಿಯಾಗಿದ್ದ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಜಗಳೂರಿನ ಕಸವನಹಳ್ಳಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿ ₹8 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

