ಚಿಕ್ಕಬಳ್ಳಾಪುರ: ಸಂಬಂಧಿಕರ ತಿಥಿ ಕಾರ್ಯಕ್ಕೆಂದು ಪತ್ನಿಯ ತವರು ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಗೋಡಂಬಿ ತೋಟಕ್ಕೆ ಕರೆದೊಯ್ದು ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಮೃತಳನ್ನು ಪದ್ಮಾ ಎಂದು ಗುರುತಿಸಲಾಗಿದ್ದು, ಆರೋಪಿ ಚಂದ್ರಶೇಖರ್ ಕೊಲೆ ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. 14 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಮಕ್ಕಳಿದ್ದಾರೆ. ಚಂದ್ರಶೇಖರ್‌ಗೆ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದ್ದು, ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ತಾತಹಳ್ಳಿಯಲ್ಲಿ ನಡೆದಿದೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಅತ್ತೆ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ತಾಯಿಯನ್ನು ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
