ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು ಅರ್ಧಕ್ಕೆ ಬಿಟ್ಟು ಹೊರನಡೆದರು. ಈ ವಿಚಾರವಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅಕ್ರೋಶ ವ್ಯಕ್ತಪಡಿಸಿದರು. ಮತ್ತೊಮ್ಮೆ ಪರೀಕ್ಷೆ ನಡೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದರು.

ಇದೀಗ ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇ ಪದೇ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕಿಡಿಕಾರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

