ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಮೊಮೊ ಸಲ್ಲಿಸಿ ಈ ಮಾಹಿತಿ ನೀಡಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಸರ್ಕಾರವು ಮೊಮೊ ಪ್ರತಿಯನ್ನು ಮೇಲ್ಮನವಿದಾರರಿಗೆ ಒದಗಿಸಬೇಕು. ಸರ್ಕಾರದ ನಿರ್ಧಾರಕ್ಕೆ ಅರ್ಜಿದಾರರಿಗೆ ಯಾವುದಾದರೂ ಆಕ್ಷೇಪಣೆಯಿದ್ದರೆ ಸಲ್ಲಿಸಬಹುದು ಎಂದು ಸೂಚಿಸಿ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು. ಅಲ್ಲದೆ, ಸಮಿತಿಯ ನಿರ್ಣಯವು ಈ ಮೇಲ್ಮನವಿ ಕುರಿತ ವಿಭಾಗೀಯ ಪೀಠದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

