ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ ಇಲ್ಲ ಎಂಬ ಕ್ಷುಲ್ಲಕ ಮಾತುಗಳು ನಮಗೆ ಅವಶ್ಯಕತೆ ಇಲ್ಲ ಎಂದರು.
ಸಿದ್ದರಾಮಯ್ಯ ಹೋದರು ಎಂದು ಕೋಲಾರದಲ್ಲಿ ನಮ್ಮ ಯಾವುದೇ ಕಾರ್ಯತಂತ್ರ ಬದಲಾಗಲ್ಲ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ. ಸಿದ್ದರಾಮಯ್ಯ ಅಷ್ಟೆ ಅಲ್ಲ, ಯಾರೇ ನಿಂತರೂ ನಮ್ಮ ಪಕ್ಷಕ್ಕೆ ಆತಂಕ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಸಮಸ್ಯೆ ಎಂದರೆ ನಮ್ಮ ಪಕ್ಷಕ್ಕೆ ಕೈಕೊಟ್ಟು ಹೋದ ಹಾಲಿ ಶಾಸಕ ಶ್ರೀನಿವಾಸ್‌ಗೌಡರು. ಅವರು ನಮಗೆ ಮಾಡಿದ ದ್ರೋಹವೇ ಈ ಬಾರಿ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ. ಸಿದ್ದರಾಮಯ್ಯ ಅವರಿಗೆ ನಕಾರಾತ್ಮಕ ಅಂಶಗಳು ಇರುವುದೇ ಅಲ್ಲಿ. ಹೀಗಾಗಿ ನಮ್ಮ ಪಕ್ಷಕ್ಕೆ ಆತಂಕ ಏನೂ ಇಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

