ಬೆಂಗಳೂರು : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

