ಬೆಂಗಳೂರು: ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.
ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧ ಪೊಲೀಸರು ಸರ್ಕಾರೇತರ ಸಂಸ್ಥೆ ಚಿಲುಮೆಗೆ ಮಾಲೀಕರು ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಗೆ ಮೊದಲು ಸಮನ್ಸ್ ನೀಡಲಾಗಿತ್ತು. ಅದೇ ನಿರೀಕ್ಷೆಯಲ್ಲಿದ್ದ ಬೆಂಗಳೂರು ನಗರದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ನಿರೀಕ್ಷಣಾ ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಕೆ. ಶ್ರೀನಿವಾಸ್ ಅವರ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 8ರಂದು ನ್ಯಾಯಾಲಯ ಕಾಯ್ದಿರಿಸಿತ್ತು. ಅದರಂತೆ ಗುರುವಾರ ವಿಚಾರಣ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿದೆ. ಜಿಲ್ಲಾಧಿಕಾರಿಗಳು ಹೈಕೋರ್ಟ್ ಮೊರೆ ಹೋಗಬಹುದು ಎಂದು ಹಲಸೂರು ಗೇಟ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.
ಡಿಸಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಬಿಬಿಎಂಪಿ ಕಂದಾಯ ಅಧಿಕಾರಿಗಳು ಸಾಮಾನ್ಯ ಜಾಮೀನು ಪಡೆಯುವುದು ಕಷ್ಟಕರವಾಗಿದೆ. ಪ್ರಕರಣ ಸಂಬಂಧ ಬಿಬಿಎಂಪಿ ಅಧಿಕಾರಿಗಳಾದ ಎಸ್.ರಂಗಪ್ಪ, ಸೇರಿದಂತೆ ಕೆಲವು ಬಿಬಿಎಂಪಿ ಅಧಿಕಾರಿಗಳು ಅಮಾನತುಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

