ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಜಿಮ್ ತರಬೇತುದಾರ ಪಾನಿಪೂರಿ ಕಿಟ್ಟಿ, ಆತನ ಸಂಬಂಧಿ ಮಾರುತಿಗೌಡ ನಡುವೆ 2018ರಲ್ಲಿ ನಡೆದಿದ್ದ ಗಲಾಟೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ‘ಅಂದು ವಿಜಯ್ ಪುತ್ರ ಸಾಮ್ರಾಟ್ ಮೇಲೆ ಕಿಟ್ಟಿ ಹಾಗೂ ಮಾರುತಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಕಾರಿನಲ್ಲಿ ಮಾರುತಿಯನ್ನು ನಟ ವಿಜಯ್ ಕರೆದೊಯ್ದು ಹಲ್ಲೆ ನಡೆಸಿದ್ದರು’ ಎಂಬ ಆರೋಪ ಕೇಳಿಬಂದಿತ್ತು. ಪರಸ್ಪರ ದೂರುಗಳು ದಾಖಲಾಗಿದ್ದವು.
‘ಸಾಕ್ಷ್ಯಾಧಾರಗಳ ಕೊರತೆಯಿಂದ ಮಾರುತಿ ಹಾಗೂ ಕಿಟ್ಟಿ ವಿರುದ್ಧದ ಪ್ರಕರಣ ಕೈಬಿಡಲಾಗಿತ್ತು. ಅದನ್ನು ಹೈಕೋರ್ಟ್‌ನಲ್ಲಿ ವಿಜಯ್ ಪ್ರಶ್ನಿಸಿದ್ದರು. ನ್ಯಾಯಾಲಯದ ಸೂಚನೆಯಂತೆ ಮತ್ತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗಲಾಟೆಯಲ್ಲಿ ಹಲ್ಲೆಗೆ ಒಳಗಾಗಿದ್ದ ಮಾರುತಿ ಆಸ್ಪತ್ರೆಯಲ್ಲಿ ಒಂದು ತಿಂಗಳು ಚಿಕಿತ್ಸೆ ಪಡೆದುಕೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

