ಹುಬ್ಬಳ್ಳಿ: ವಿಧಾನ ಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಆಪ್ ಸಖತ್ ಪ್ಲಾನ್ ರೂಪಿಸಿದ್ದು, ಕರ್ನಾಟಕದಲ್ಲಿಯೂ ಆಮ್ ಆದ್ಮ ಪಕ್ಷ ಖಾತೆ ತೆರೆಯಲು ಪ್ರಯತ್ನ ಮುಂದುವರೆಸಿದೆ. 2023 ರ ವಿಧಾನಸಭಾ ಚುನಾವಣೆಯನ್ನು ಆಪ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಕ್ಕೆ ಅರವಿಂದ ಕೇರ್ಜಿವಾಲ್ ಗ್ರಾಂಡ್ ಎಂಟ್ರಿ ಕೊಟ್ಟಿದ್ದು, ಕರ್ನಾಟಕದ ಮಧ್ಯ ಭಾಗದಿಂದಲೇ ಪಕ್ಷ ಸಂಘಟನೆಗೆ ಅರವಿಂದ ಕೇಜ್ರಿವಾಲ್ ಮುಂದಾಗಿದ್ದಾರೆ. ದಾವಣಗೆರೆಯಲ್ಲಿ ನಡೆಯುವ ಬ್ಲಾಕ್ ಸದಸ್ಯರ ಪ್ರಮಾಣ ವಚನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅವರು, ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ. ಹೀಗಾಗಿ ತಡರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅರವಿಂದ ಕೇಜ್ರಿವಾಲ್, ಭಗವಂತ ಮಾನ್ ಬಂದಿಳಿದಿದ್ದಾರೆ. ಇದೇ ಮೊದಲ ಬಾರಿಗೆ ಆಗಮಿಸಿದ ಉಭಯ ನಾಯಕರಿಗೆ ವಾಣಿಜ್ಯನಗರಿಗೆ ಆಪ್ ನಾಯಕರು ಅದ್ದೂರಿಯಾಗಿ ಸ್ವಾಗತ ನೀಡಿದ್ದು, ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು 10 ಗಂಟೆಗೆ ಹುಬ್ಬಳ್ಳಿಯಿಂದ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ದಾವಣಗೆರೆ ಕಾರ್ಯಕ್ರಮಕ್ಕೂ ಮುಂಚೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಲಿರುವ ಕೇಜ್ರಿವಾಲ್ ಪಕ್ಷದ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಖಾಸಗಿ ಹೋಟೆಲ್‌ನಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಖಾತೆ ಓಪನ್ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದು ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.
