ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮುಸುಕಿ ಗುದ್ದಾಟ ಜೋರಾಗಿದ್ದು, ಬೆಳಗಾವಿ ಕಾಂಗ್ರೆಸ್ ನಲ್ಲಿ ಹೊತ್ತಿಕೊಂಡ ಅಸಮಾಧಾನದ ಜ್ವಾಲೆಯನ್ನ ಶಮನಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದಾರೆ.
ಬುಧವಾರ ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿರುಕಿಲ್ಲ. 136 ಶಾಸಕರೂ ನಮ್ಮವರೇ. ನಮ್ಮಲ್ಲಿ ಬಿರುಕಿದೆ ಎಂದು ಹೇಳುವ ಬಿಜೆಪಿ ನಾಯಕರು ಒಮ್ಮೆ ಜೆ.ಎಚ್. ಪಟೇಲರ ಭಾಷಣ ಕೇಳಿಸಿಕೊಳ್ಳಲಿ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಳಗಾವಿಯ ಶಾಸಕರು, ಸಚಿವರು ನಿಮ್ಮನ್ನು ಸ್ವಾಗತಿಸಲು ಬರಲಿಲ್ಲ, ಸತೀಶ್ ಜಾರಕಿಹೊಳಿ ಅವರಿಗೂ ನಿಮಗೂ ಮುನಿಸಿದೆಯೇ ಎಂದು ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು, ನಮ್ಮಲ್ಲಿ ಯಾವುದೇ ಬಿರುಕಿಲ್ಲ. ನೆನ್ನೆ, ಮೊನ್ನೆ ಸತೀಶ್ ಅವರು ಮತ್ತು ನಾನು ಜೊತೆಯಲ್ಲಿಯೇ ಕುಳಿತು ಮಾತನಾಡಿದ್ದೇವೆ. ನಾನು ಬಂದಿರುವುದು ಖಾಸಗಿ ಕಾರ್ಯಕ್ರಮಕ್ಕೆ. ಲಕ್ಷ್ಮಿ ಹೆಬ್ಬಾಳಕರ್ ಅವರು ನಾಮಕರಣ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿ ಇದ್ದಾರೆ. ಕೌಜಲಗಿ ಅವರಿಗೆ ಆರೋಗ್ಯ ಸರಿಯಿಲ್ಲ. ದಿಢೀರ್ ಎಂದು ನಿನ್ನೆ ರಾತ್ರಿ ಈ ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ಕೆಲಸಗಳು ಇರುತ್ತವೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





