ಹಾಸನ: ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸರ್ಕಾರದ ವಿರುದ್ದ ರೇವಣ್ಣ ವಾಗ್ದಾಳಿ ನಡೆಸಿದರು.
ಬರಗಾಲದ ನಿರ್ವಹಣೆಗಾಗಿ ಸರ್ಕಾರ 12 ಕೋಟಿ ರೂ.ಅನುದಾನವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಹಾಕಲಾಗಿದೆ. ಅದರಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ ಅನುದಾನವನ್ನ ಹಂಚಿಕೆ ಮಾಡಿದ್ದಾರೆ. ಇನ್ನ ಉಳಿದ ಎಂಟು ಕೋಟಿ ಅವರ ಖಾತೆಯಲ್ಲಿ ಇದೆ. ಆದರೆ ಹಂಚಿಕೆ ಮಾಡಿರುವ ಅನುದಾನವನ್ನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎನ್.ಡಿಆರ್‌ಎಫ್ ಮತ್ತು ಎಸ್‌ಟಿಆರ್ ಎಫ್ ಗೈಡ್ ಲೈನ್ ಪ್ರಕಾರ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿವೆ. ಆದ್ದರಿಂದ ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮತ್ತು ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದ್ದು ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





