ಬೆಂಗಳೂರು: ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳುತ್ತಿಲ್ಲ. ಇದೆಲ್ಲ ನೋಡಿದರೆ ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕಾಂಗ್ರೆಸ್ ನಾಯಕ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬಿಜೆಪಿಗೆ ತಿರುತೇಟು ಕೊಟ್ಟಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಆರೋಪಿಸುತ್ತಿರುವ ಬಗೆಗಿನ ಸುದ್ದಿಗಾರರ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು. ಯತ್ನಾಳ್ ಅವರು ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದು ವಿವರಿಸಿದರು.
ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





