ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವ ಸಚಿವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಲಿ ಎಂದು ಹೇಳಿದರು. ಈ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ ಅಗತ್ಯ ಏನಿದೆ? ಬಹುಶಃ ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ, ನೆರೆ ರಾಜ್ಯದ ಮೇಲೆ ಅವರಿಗೆ ವ್ಯಾಮೋಹ ಜಾಸ್ತಿ ಅಂತ ಕಾಣುತ್ತದೆ ಎಂದು ಕಿಡಿಕಾರಿದರು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ವಿಷಯಗಳನ್ನು ಮಾತಾಡಿದರೆ ನೀವೇ ನೀರು ಎರೆದ ಹಾಗೆ ಅಲ್ಲವಾ? ಸಿಎಂ ಸಿದ್ದರಾಮಯ್ಯ ಅವರಿಗೆ ಮಂತ್ರಿಗಳ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ದಿ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





